ಇಂದು ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ.

ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂ.7ರ ವರೆಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಜೂ.7ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಬುಧವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸರ್ಕ್ಯೂಲೇಶನ್‌ 4.5 ಮತ್ತು 5.8 ಕಿ.ಮೀ ಎತ್ತರದಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜೂನ್‌ 6ರಿಂದ 8ರ ವರೆಗೆ ಹಗುರದಿಂದ ಸಾಧಾರಣವಾಗಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ.

ಮಳೆಯ ಜತೆಗೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿಯು ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಕರಾವಳಿಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ, ಎಲ್ಲೋ, ಆರೆಂಜ್‌ ಅಲರ್ಟ್:

ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಬಿರುಸು ಪಡೆಯುವ ಸಾಧ್ಯತೆ ಇದ್ದು, ಜೂ. 6ರಿಂದ 8ರ ವರೆಗೆ ಎಲ್ಲೋ ಅಲರ್ಟ್‌ ಮತ್ತು ಜೂ. 9ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಉತ್ತಮ ಗಾಳಿ- ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ತಡರಾತ್ರಿ, ಬುಧವಾರ ಮಳೆಯಾಗಿದೆ.