ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಅಂತರ ಕಾಲೇಜು ಮಟ್ಟದ ಪುರುಷರ ಹೊನಳು ಬೆಳಕಿನ ಕಬಡ್ಡಿ ಕ್ರೀಡಾಕೂಟವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು.
ಆ ನಂತರ ಮಾತನಾಡಿದ ದಿನಕರ ಬಾಬು, ಗ್ರಾಮೀಣ ಸೊಗಡು, ಸಂಸ್ಕೃತಿಯನ್ನು ಬಿಂಬಿಸುವಲ್ಲಿ ಕಬಡ್ಡಿ ಕ್ರೀಡೆ ಮಹತ್ತರ ಪಾತ್ರ ವಹಿಸುತ್ತದೆ. ಇಂದಿನ ಕ್ರಿಕೆಟ್, ಫುಟ್ಬಾಲ್ ಕ್ರೀಡೆಗಳ ಅಬ್ಬರದ ನಡುವೆ ಗ್ರಾಮೀಣ ಕ್ರೀಡೆಯೆಂದೇ ಗುರುತಿಸಿಕೊಂಡಿರುವ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದರು.
ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಾತನಾಡಿ, ಗ್ರಾಮೀಣ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಇದು ಉತ್ತಮ ಅವಕಾಶ. ಅದನ್ನು ಕ್ರೀಡಾಪಟುಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ವೇಣುಗೋಪಾಲ್ ನೊಂಡ, ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಕೆ. ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.
ಕ್ರೀಡಾಕೂಟದಲ್ಲಿ ಮಂಗಳೂರು ವಿ.ವಿ.ಯ ಅಂತರ್ ವಲಯ ಮಟ್ಟದ ವಿವಿಧ 24 ಕಾಲೇಜುಗಳ ತಂಡಗಳು ಪಾಲ್ಗೊಂಡಿದ್ದವು.
|
|