ಉಡುಪಿ: ಜನವಿರೋಧಿ ಬಜೆಟ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ಬಜೆಟ್ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಕಾರ್ಯಕರ್ತರು ಫಲಕ ಹಿಡಿದು, ಘೋಷಣೆ ಕೂಗಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಶೂನ್ಯ ಬಜೆಟ್ ಮಂಡಿಸಿ, ಎಲ್ಲರ ಮೂಗಿಗೆ ತುಪ್ಪ ಸವರಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಹಿತ ಶಿಕ್ಷಣ, ಆರೋಗ್ಯ ಕ್ಷೇತ್ರದ ದಿಕ್ಕು ತಪ್ಪಿಸಿದ್ದಾರೆ ಎಂದು ದೂರಿದರು. ಕೇಂದ್ರದ ಮೇಲೆ ವಿನಾ ಕಾರಣ ಗೂಬೆ ಕೂರಿಸುವ ಸಿಎಂ ಸಿದ್ದರಾಮಯ್ಯ ಪ್ರತಿ ಕನ್ನಡಿಗನ ಮೆಲೆ ಒಂದು ಲಕ್ಷ ರೂ. ಸಾಲದ ಹೊರೆ ಹೊರಿಸಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, 16ನೇ ಬಾರಿ ದಾಖಲೆಗಾಗಿ ಜನರಿಗೆ ಕೊಟ್ಟ ಬಜೆಟ್ ಜನಪರವಾಗಿಲ್ಲ. ಬಹುಸಂಖ್ಯಾತರನ್ನು ಕಡೆಗಣಿಸಿ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡಲಾಗಿದೆ. ಉಡುಪಿ ಜಿಲ್ಲೆಯ ನಿರೀಕ್ಷೆ ಹುಸಿಯಾಗಿದೆ. ಜಿಲ್ಲೆಯಲ್ಲಿ ಬಿಜೆಪಿಯ ಐದು ಶಾಸಕರಿರುವ ಕಾರಣಕ್ಕೆ ಜಿಲ್ಲೆಯನ್ನು ಸಂಪೂರ್ಣವಾಗಿ ತುಳಿಯಲಾಗುತ್ತಿದೆ  ಎಂದು ದೂರಿದರು.

ಟಿ. ಜಿ. ಹೆಗ್ಡೆ ಕುಂದಾಪುರ ಮಾತನಾಡಿದರು. ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ದಿನಕರ ಶೆಟ್ಟಿ ಹೆರ್ಗ, ನಳಿನಿ ಪ್ರದೀಪ್ ರಾವ್, ದಿಲ್ಲೇಶ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಸತ್ಯಾನಂದ ನಾಯಕ್, ವೀಣಾ ಶೆಟ್ಟಿ, ನಯನಾ ಗಣೇಶ್, ಪ್ರಕಾಶ್ಚಂದ್ರ ಶೆಟ್ಟಿ ಪಾದೆಬೆಟ್ಟು, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಕನ್ನಾರು ಕಮಲಾಕ್ಷ ಹೆಬ್ಬಾರ್, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.