ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪಕ್ಷದ ಕಚೇರಿ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ತಕ್ಷಣವೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರಿ ಬಿಟ್ಟು ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಸಾಲು ಸಾಲು ಆರೋಪಗಳು ಬಂದರೂ ಯಾವುದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಈಗ ಎಲ್ಲ ಕಡೆ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಸಿದ್ದರಾಮಯ್ಯ ರಾಜ್ಯದ ಉದ್ಧಾರ ಮಾಡುವ ಬದಲಿಗೆ ತಮ್ಮ ಕುಟುಂಬವನ್ನು ಉದ್ಧಾರ ಮಾಡಿಕೊಂಡಿದ್ದಾರೆ. ಅವರು ತತ್‌ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಸಿದ್ದರಾಮಯ್ಯ ಅವರ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ತಮ್ಮ ಮೇಲೆ ಆರೋಪ ಬಂದ ಕೂಡಲೇ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ ನೀಡಿಲ್ಲ. ಬಿಜೆಪಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.
ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ರೇಶ್ಮಾ ಉದಯ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಶ್ಯಾಮಲಾ ಕುಂದರ್, ವೀಣಾ ಶೆಟ್ಟಿ, ಶಿಲ್ಪಾ ಜಿ ಸುವರ್ಣ, ವಿಜಯ ಕುಮಾರ್ ಕೊಡವೂರು ಮೊದಲಾದವರು ಭಾಗವಹಿಸಿದ್ದರು.