ಉಡುಪಿ: ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿದ್ದ ಹಣವನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಣ್ಣೂರು ಪಡೀಲ್ ನಿವಾಸಿ ಮೊಹಮ್ಮದ್ ಯಾಸೀನ್ (21) ಹಾಗೂ ಮಂಜನಾಡಿ ನಿವಾಸಿ ಅಬೂಬಕ್ಕರ್ ಸಿದ್ದಿಕ್(24) ಎಂದು ಗುರುತಿಸಲಾಗಿದೆ.
ಫೆಬ್ರವರಿ 12ರಂದು ಬೆಳಿಗ್ಗೆ ಸುಮಾರು 2.40 ಗಂಟೆಗೆ ಇಬ್ಬರು ಆರೋಪಿಗಳು ಉಡುಪಿ ತಾಲೂಕಿನ ಉದ್ಯಾವರ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿ ಹಣ ಕಳ್ಳತನಕ್ಕೆ ಪ್ರಯತ್ನಿಸಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಕಾರ್ಯಾಚರಣೆಗೆ ಇಳಿದ ಪೊಲೀಸರ ತಂಡ ಮಂಗಳೂರಿನ ಬಂದರಿನಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿರುವ ಸ್ಕೂಟಿ, ಜಾಕೆಟ್-1, ಹೆಲ್ಮೆಟ್-1, ಕ್ಯಾಪ್-1, ಹ್ಯಾಂಡ್ ಗ್ಲೌಸ್-1ಜೊತೆ, ಕತ್ತಿ-1, ಹ್ಯಾಮರ್- 1 ಹಾಗೂ ಬ್ಯಾಗ್ -1 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.













