ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.
ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಜಯ್ ಶಾ ವಿಶ್ವ ಕ್ರಿಕೆಟ್ ಮಂಡಳಿಯ ಗದ್ದುಗೆ ಏರಲಿದ್ದಾರೆ. ಅದರಂತೆ ಡಿಸೆಂಬರ್ 1 ರಿಂದ ಜಯ್ ಶಾ ಕಾರ್ಯಾರಂಭ ಮಾಡಲಿದ್ದಾರೆ.