ಕರ್ನಾಟಕದ ಗ್ಯಾರಂಟಿ ಯೋಜನೆಗಳು ಬೇರೆ ರಾಜ್ಯಗಳಿಂದ ಅನುಕರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ತಾಲೂಕು ಪಂಚಾಯತ್ ಕಟ್ಟದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.

ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ‌ಜಾರಿಗೆ ತರಲಾಗುತ್ತಿದೆ. ಭಾರತದ ಬದಲಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಅನುಷ್ಠಾನ ಸಮಿತಿಗಳು ಜನರಿಗೆ ಮುಟ್ಟಿಸಲಿ, ರಾಜ್ಯದ ಯೋಜನೆಗಳು ಜನರಿಗೆ ತಲುಪುವಂತಾಗಲಿ ಎಂದರು.

ಈ ವೇಳೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಉಡಾ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ‌ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ಎಂಎ ಗಫೂರ್, ದಿನೇಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.