ತಂಬಾಕು ಮುಕ್ತ ಸಮಾಜದ ನಿರ್ಮಾಣವಾಗಬೇಕು: ನ್ಯಾ. ಎಂ.ಪುರುಷೋತ್ತಮ

ಉಡುಪಿ: ತಂಬಾಕು ಸೇವನೆಯು ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುವುದರಿಂದ ಅಂತಹ ಕೆಟ್ಟ ಹವ್ಯಾಸಗಳಿಗೆ ಒಳಗಾಗದೆ ಆರೋಗ್ಯಯುತ ಜೀವನ ನಡೆಸಲು ತಂಬಾಕನ್ನು ಸಂಪೂರ್ಣವಾಗಿ ನಿಷೇಧಿಸುವುದರೊಂದಿಗೆ ತಂಬಾಕು ಮುಕ್ತ ಸಮಾಜದ ನಿರ್ಮಾಣವಾಗಬೇಕು ಎಂದು ಪ್ರಧಾನ ಹಿರಿಯ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ಪುರುಷೋತ್ತಮ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಇವರ ಸಂಯುಕ್ತಾ ಆಶ್ರಯದಲ್ಲಿ ವಿಶ್ವ ತಂಬಾಕು ದಿನದ ಪ್ರಯುಕ್ತ ನಡೆದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ತಂಬಾಕಿನ ಕುರಿತು ಯುವ ಪೀಳಿಗೆಯಲ್ಲಿ ಜಾಗೃತಿಯನ್ನು ಮೂಡಿಸುವುದರೊಂದಿಗೆ ತಂಬಾಕು ಸೇವೆನೆಯಂತಹ ದುಶ್ಚಟಗಳಿಂದ ನಮ್ಮ ಮುಂದಿನ ಪೀಳಿಗೆಯನ್ನು ರಕ್ಷಿಸಿಕೊಳ್ಳಬೇಕು ಎಂದ ಅವರು ಜನಸಾಮಾನ್ಯರಿಗೆ ತಂಬಾಕು ಸೇವೆನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಬೇಕು ಎಂದರು.

ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಧ್ಯಾಪಕಿ ಡಾ.ನಿಕೇತನ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ, ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಅಶೋಕ್ ಕುಮಾರ್ ಎಚ್, ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ ವಂದಿಸಿದರು.

ಜಾಥಾವು ಕಾಲೇಜಿನ ಆವರಣದಿಂದ ಪ್ರಾರಂಭಗೊಂಡು ಪುರಭವನ ಮೂಲಕ ಹಾದು ಕೋರ್ಟ್ ಸರ್ಕಲ್, ಜೋಡುಕಟ್ಟೆ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯವರೆಗೆ ಸಾಗಿತು.