ಉಡುಪಿ, ಫೆಬ್ರವರಿ 23: ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶ್ರೇಯೋಭಿವೃದ್ಧಿಗೆ ಮಿಸಲಿರಿಸಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಕಾಲಾವಧಿಯಲ್ಲಿ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿ ಯ ಜಿಲ್ಲಾಧಿಕಾರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿತರಕ್ಷಣೆ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ, ಅರ್ಹ ಫಲಾನುಭವಿಗಳು ಈ ಯೋಜನೆಗಳ ಲಾಭ ಪಡೆಯುವಂತೆ ಮಾಡುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್‌ಚ್ಛಕ್ತಿ ಸೌಲಭ್ಯ, ರಸ್ತೆ, ಚರಂಡಿ, ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.
ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಸಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ ಅವರು, ಇಂದಿನ ಕುಂದುಕೊರತೆ ಸಭೆಯಲ್ಲಿ ಬಂದಿರುವ ಅಹವಾಲುಗಳನ್ನು ಸಂಬ೦ಧಪಟ್ಟ ಇಲಾಖೆಯ ಅಧಿಕಾರಿಗಳು ಆದ್ಯತೆಯ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಯ ಮುಖಂಡರುಗಳು, ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಮೀಸಲಿರಿಸಿದ ಅನುದಾನವನ್ನು ದುರ್ಬಳಕೆ ಆಗಿರುವ ಬಗ್ಗೆ, ಡಿಸಿ ಮನ್ನಾ ಜಾಗವನ್ನು ಮಂಜೂರು ಮಾಡಲು, ನಿವೇಶನ ಹಂಚಿಕೆ ಮಾಡಲು, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನಿಗಧಿತ ಪ್ರಮಾಣದ ಆಹಾರ ಪದಾರ್ಥಗಳು ವಿತರಣೆ ಆಗುತ್ತಿಲ್ಲ, ಅಂಬೇಡ್ಕರ್ ಭವನಗಳ ನಿರ್ಮಾಣ ಶೀಘ್ರದಲ್ಲಿಯೇ ಕೈಗೊಳ್ಳಬೇಕು, ನಮೂನೆ 50, 53 ಅಡಿಯಲ್ಲಿ ಅರ್ಜಿ ಸಲ್ಲಿಸಿದ ಭೂಮಿಯನ್ನು ಹಂಚಿಕೆ ಮಾಡಬೇಕು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಬೇಕು, ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್‌ಗಳನ್ನು ಕೊರೆಯುವುದು ಹಾಗೂ ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಶೀಘ್ರದಲ್ಲಿಯೇ ಆಗಬೇಕು ಹಾಗೂ ಮತ್ತಿತರ ಅಹವಾಲುಗಳನ್ನು ಸಮಿತಿಯ ಮುಂದಿಟ್ಟರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಡಿವೈಎಸ್‌ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ ಎಸ್, ಡಿಎಫ್‌ಓ ಗಣಪತಿ, ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಪ್ರಿಯಂವದ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.