ಉಡುಪಿ: ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ಇದರ ವತಿಯಿಂದ ದ.ಕ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಪಂಚಾಯತ್, ನಗರ ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ- ಸಾಂಸ್ಕೃತಿಕ ಸ್ಪರ್ಧೆ “ಹೊಂಬೆಳಕು -2025′ ಅನ್ನು ಇದೇ ಫೆ.22ರಂದು ಮಂಗಳೂರು ಅಡ್ಯಾರ್ ನ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪ್ರತಿಷ್ಠಾನದ ಗೌರವಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದರು.
ಈ ಕುರಿತು ಅಂಬಲಪಾಡಿಯ ಕಾರ್ತಿಕ್ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸದಾ ಕಾರ್ಯದ ಒತ್ತಡದಲ್ಲಿರುವ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಒಂದು ದಿನ ಮೀಸಲಿಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾನಪದ ಕ್ರೀಡೋತ್ಸವ ಹಾಗೂ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮದ ಮಾದರಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, 8 ಸಾವಿರಕ್ಕೂ ಅಧಿಕ ಮಂದಿ ಜನಪ್ರತಿನಿಧಿಗಳು ಹಾಗೂ ಅಧಿಕಾರ ವರ್ಗದವರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಫೆ.22ರಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಜಿ.ಸಿ ಚಂದ್ರಶೇಖರ್ ಕ್ರೀಡಾ ಜ್ಯೋತಿ ಸ್ವೀಕಾರ ಹಾಗೂ ಪಥ ಸಂಚಲನಕ್ಕೆ ಚಾಲನೆ ನೀಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯುಟಿ ಖಾದರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾನೂನು ಸಚಿವ ಎಚ್.ಕೆ ಪಾಟೀಲ್, ವಸತಿ ಸಚಿವ ಜಮೀರ್ ಅಹಮ್ಮದ್, ಸಣ್ಣ ನೀರಾವರಿ ಸಚಿವ ಎಸ್.ಎಸ್. ಭೋಸ ರಾಜು, ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ ಸೇರಿದಂತೆ ಅನೇಕ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ರಾಜು ಪೂಜಾರಿ, ರೋಶನಿ ಒಲಿವೆರಾ, ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.












