ಮೌಲ್ಯಯುತವಾದ ಆಧಾರ್ ಕಾರ್ಡ್ ಅನ್ನು ಹೊಂದುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸುತ್ತಿದೆ. ಎಲ್ಲರೂ ಈ ಗುರುತಿನ ಚೀಟಿಯನ್ನು ಹೊಂದಬೇಕು. ಆಧಾರ್ ಗುರುತಿನ ಚೀಟಿ ಹೊಂದದೇ ಇರುವವರು ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಬೇಕು. ಕಡ್ಡಾಯ ಬಯೋ ಮೆಟ್ರಿಕ್, ನವೀಕರಣ ಹಾಗೂ ಸ್ಯಾಚುರೇಷನ್ ಗೊಳಿಸುವುದರೊಂದಿಗೆ ಮೌಲ್ಯಯುತವಾದ ಆಧಾರ್ ಕಾರ್ಡ್ ಹೊಂದಬೇಕು ಎಂದರು.

ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು 2,07,021, 18 ವರ್ಷ ಮೇಲ್ಪಟ್ಟ 11,73,636 ಜನರು ಆಧಾರ್ ಕಾರ್ಡ್ ಅನ್ನು ಪಡೆದಿದ್ದಾರೆ. ರಾಜ್ಯ ಆಧಾರ್ ನೋಂದಣಿ ಪ್ರಾಧಿಕಾರವು ಜಿಲ್ಲೆಯ ಆಯ್ದ ಬ್ಯಾಂಕ್‌ಗಳು, ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕಚೇರಿ ಸಮಯದಲ್ಲಿ ಸಾರ್ವಜನಿಕರು ಆಧಾರ್ ಸೇವೆಯನ್ನು ಪಡೆಯಬಹುದಾಗಿದೆ ಎಂದರು.

ಕಳೆದ 10 ವರ್ಷಗಳ ಹಿಂದೆ ಆಧಾರ್ ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರು ಗುರುತಿನ ಹಾಗೂ ವಿಳಾಸ ದಾಖಲೆಯನ್ನು ಸಮೀಪದ ಆಧಾರ್ ಕೇಂದ್ರದಲ್ಲಿ ಮರು ಅಪ್ಲೋಡ್ ಮಾಡಿ ನೊಂದಣಿ ಮಾಡಿಕೊಳ್ಳಬೇಕು. ಇದನ್ನು myAadhaar.uidai.gov.in. portal ನಲ್ಲಿ ಆನ್‌ಲೈನ್ ಮೂಲಕವಾಗಿ ನೇರವಾಗಿ ನವಿಕರಿಸಲು ಅವಕಾಶವಿದೆ. ಇದರ ಉಪಯೋಗ ಪಡೆದುಕೊಳ್ಳಬೇಕು. ಒಂದೊಮ್ಮೆ ನವೀಕರಿಸದೆ ಇದ್ದಲ್ಲಿ ಆಧಾರ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಇದರಿಂದ ಸೌಲಭ್ಯ ಅಥವಾ ಸೇವೆ ಪಡೆಯಲು ಅನಾನುಕೂಲವಾಗುತ್ತದೆ ಎಂದರು.

ಪ್ರತಿಯೊಬ್ಬರೂ ಆಧಾರ್ ಬಯೋಮೆಟ್ರಿಕ್ ನವೀಕರಣ ಮಾಡಿಸಿಕೊಳ್ಳಬೇಕು. ಇದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟವರು 38,680 ಜನರು, 15 ವರ್ಷ ಮೇಲ್ಪಟ್ಟ 38,188 ಜನ ಸೇರಿದಂತೆ ಒಟ್ಟು 76,868 ಜನರು ನವೀಕರಿಸಿಕೊಳ್ಳಬೇಕಿದೆ. ಈ ಬಗ್ಗೆ ಹೆಚ್ಚಿನಪ್ರಚಾರ ನೀಡಿ ನವೀಕರಣಗೊಳಿಸಲು ಉತ್ತೇಜಿಸಬೇಕು. ಶಾಲಾ ವಿದ್ಯಾರ್ಥಿಗಳಿದ್ದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ನಿಯೋಜಿಸಿ, ಬಯೋಮೆಟ್ರಿಕ್ ಮಾಡಿಸಬೇಕು ಎಂದು ಸೂಚನೆ ನೀಡಿದರು.

ಹೊರದೇಶಗಳಿಂದ ಬಂದಿರುವ ಜನರು ಸಹ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಆಧಾರ್ ನೋಂದಣಿಗೆ ಮುಂದಾಗುವ ಸಾಧ್ಯತೆ ಗಳಿರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದ ಅವರು, ಕೆಲವರು ನಕಲಿ ಆಧಾರ್ ಪ್ರತಿಗಳನ್ನು ಹೊಂದಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿರುತ್ತವೆ. ಇವುಗಳ ಬಗ್ಗೆ ಪರಿಶೀಲನೆ ಯನ್ನು ಆಗಿಂದಾಗ್ಗೆ ಮಾಡಬೇಕು ಎಂದರು.

5 ವರ್ಷದೊಳಗಿನ ಮಕ್ಕಳು ಹೊಸದಾಗಿ ಆಧಾರ್ ಕಾರ್ಡ್ ನೊಂದಣಿಯನ್ನು ಸಮೀಪದ ಅಂಚೆ ಕಚೇರಿ, ತಾಲೂಕು ಕಚೇರಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಅವಶ್ಯ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದರು.

ಆಧಾರ್ ಕಾರ್ಡ್ ಹೊಂದಿದವರು ಮರಣ ಹೊಂದಿದ್ದಲ್ಲಿ ಅವರ ಕಾನೂನು ಬದ್ಧ ವಾರಾಸುದಾರರು ಅವರ ಮರಣ ಪ್ರಮಾಣ ಪತ್ರವನ್ನು ನೀಡಿ, ಆಧಾರ್ ಕಾರ್ಡ್ ಅನ್ನು ತಪ್ಪದೇ ರದ್ದುಪಡಿಸಬೇಕು. ರದ್ದುಪಡಿಸದೇ ಇದ್ದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಇದರ ಉಪಯೋಗ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಈ ರೀತಿ ಆದಲ್ಲಿ ಕಾನೂನುಬದ್ಧ ವಾರಸುದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಯು.ಐ.ಡಿ.ಎ.ಐ ಡೈರೆಕ್ಟರ್ ಮನೋಜ್ ಕುಮಾರ್, ಯು.ಐ.ಡಿ.ಎ.ಐ ಅಸಿಸ್ಟೆಂಟ್ ಮ್ಯಾನೆಜರ್ ಮೊಹಮ್ಮದ್ ಮೂಸಾಬ್, ರಿಕೇಶ್, ಡಿಡಿಪಿಯು ಗಣಪತಿ, ಡಿಡಿಪಿಐ ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.