ಉಡುಪಿ:ಎಸ್.ಎಸ್.ಎಲ್.ಸಿ ಪರೀಕ್ಷೆ-1 : ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

ಉಡುಪಿ: 2025 ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ
ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್
ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು
ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ.

ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ
ಕಾಪಿಯರ್‌ಗಳನ್ನು ಮುಚ್ಚಲು ಆದೇಶಿಸಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು
ನಿರ್ಬಂಧಿಸಲಾಗಿರುತ್ತದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ,
ಫ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಆಯೋಗವು ನಡೆಸುವ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ತಪಾಸಣೆಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸ್ಪರೆಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿರುತ್ತದೆ.

ಮೊಬೈಲ್/ ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು
ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಜ್ ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿರುತ್ತದೆ.

ಹಿಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿರುತ್ತದೆ.

ಕರ್ನಾಟಕ ಲೋಕ ಸೇವಾ ಆಯೋಗವು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತç ಸಂಹಿತೆಯನ್ನು ಅಭ್ಯರ್ಥಿಗಳು
ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿರುತ್ತದೆ.

ಕರ್ನಾಟಕ ಲೋಕ ಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಸದರಿ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ / ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ
ಅನ್ವಯಿಸುವುದಿಲ್ಲ. ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.