ಉಡುಪಿ:ಏ.16 ಮತ್ತು 17 ರಂದು ನಡೆಯಲಿರುವ ಸಿಇಟಿ ಪರೀಕ್ಷೆಯಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದು
ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ -16 ಮತ್ತು17 ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ ತಲಾ 6 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.
ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು,
ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ
ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಮತ್ತಿತರ ಪರೀಕ್ಷಾ ಪ್ರಾಧಿಕಾರ ಸೂಚಿಸಿರುವ ಗುರುತಿನ ಚೀಟಿ) ತರುವಂತೆ ತಿಳಿಸಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು, ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮಾಡಬೇಕು.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ವ್ಯವಸ್ಥೆಯನ್ನು ಮಾಡಬೇಕು. ಬೇಸಿಗೆ ಕಾಲದ ಹಿನ್ನೆಲೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದ ಅವರು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ
ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಕಾಲೇಜು ಪ್ರಾಂಶುಪಾಲರುಗಳು ಹಾಗೂ ಪರೀಕ್ಷಾ ಕರ್ತವ್ಯಕ್ಕೆ
ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.