ಉಡುಪಿ:ಜಿಲ್ಲಾ ಮಟ್ಟದ ಭಗವಾನ್ ಬುದ್ಧ ಜಯಂತಿ ಅರ್ಥಪೂರ್ಣ ಆಚರಣೆಗೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲಾ ಮಟ್ಟದಲ್ಲಿ ಮೇ 12 ರಂದು ನಡೆಯಲಿರುವ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮವನ್ನು
ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.

ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ನಡೆದ ಭಗವಾನ್ ಬುದ್ಧರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮವು ಮೇ 12 ರಂದು ಬೆಳಗ್ಗೆ 10.15 ಕ್ಕೆ ನಗರದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ಬುದ್ಧವಂದನೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮವನ್ನು ಶಿಸ್ತು ಬದ್ಧವಾಗಿ ನಡೆಸಲು ಅಗತ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಬುದ್ಧರ ಜೀವನ ಚರಿತ್ರೆ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ಬುದ್ಧರ ಕುರಿತಾಗಿ ಏರ್ಪಡಿಸಲಾಗುವ ವಿವಿಧ ಸ್ಫರ್ಧೆಗಳ ವಿಜೇತರುಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನವನ್ನು ಸಹ ವಿತರಿಸಲಾಗುವುದು ಎಂದ
ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೂ, ಗಣ್ಯರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.