ಉಡುಪಿ:ಸರಕಾರದ ಸೌಲಭ್ಯಗಳನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರುಗಳಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದರು. ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪುನರ್ವಸತಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಧನ ನೀಡುತ್ತಿದೆ. ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿ ಆಗಿರುವವರು ಈ ಯೋಜನೆ ಲಾಭ ಪಡೆಯಬಹುದಾಗಿದೆ. ಪ್ರಸ್ತುತ ಸಾಲಿನಲ್ಲಿ 15 ಜನರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಒಬ್ಬರೇ ಅರ್ಜಿ ಸಲಿಸಿದ್ದು, ಈ ಯೋಜನೆಯಡಿ ಹೆಚ್ಚು ಜನರು ಅರ್ಜಿ ಸಲ್ಲಿಸುವುದರೊಂದಿಗೆ ಇದರ ಸದುಪಯೋಗ ಪಡೆಯಬೇಕು ಎಂದರು.

ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ಜಾರಿಗೊಳಿಸಲಾಗಿರುತ್ತದೆ. ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ಪಡೆದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ನೋಂದಾಯಿಸಿ ಇದರ ಲಾಭ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಈವರೆಗೆ 32 ಜನ ಲಿಂಗತ್ವ ಅಲ್ಪ ಸಂಖ್ಯಾತರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದರು.

ಸರಕಾರದ ಯಾವುದೇ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ಪೋರ್ಟಲ್ನ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ನಿಯಮಾನುಸಾರ ಗುರುತಿನ ಚೀಟಿ ನೀಡಲಾಗುವುದು ಎಂದರು.

ಲಿಂಗತ್ವ ಅಲ್ಪಸಂಖ್ಯಾತರು ಸರಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಬಂದಾಗ ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಜೊತೆಗೆ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದ ಅವರು ಸಮಾಜವು ಅವರೊಂದಿಗೆ ತಾರತಮ್ಯ ಮಾಡದೆ ಮಾನವೀಯ ನೆಲೆಯಲ್ಲಿ ಸಹಕಾರಿಸಬೇಕು ಎಂದರು.

ನಿವೇಶನ ಲಭ್ಯವಿರುವ ಅಲ್ಪಸಂಖ್ಯಾತರ ಗೃಹ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ ಅಗತ್ಯ ಆರ್ಥಿಕ ನೆರವು ಕಲ್ಪಿಸಲಾಗುವುದು ಎಂದ ಅವರು, ನಿವೇಶನ ರಹಿತರುಗಳು ಇದ್ದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ಲಭ್ಯತೆಯ ಆದ್ಯತೆಯ ಮೇಲೆ ನಿವೇಶನ ಮಂಜೂರು ಮಾಡಲಾಗುವುದು ಎಂದರು.ಅಲ್ಪ ಸಂಖ್ಯಾತರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಇದಕ್ಕಾಗಿ ಸರಕಾರದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರೆದಾಗ ಅವುಗಳಲ್ಲಿ ಭಾಗವಹಿಸಬೇಕು ಎಂದ ಅವರು ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ನಿಯಮಾನುಸಾರ ಸರಳವಾಗಿ ನೀಡುವಂತೆ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗುವುದು ಎಂದರು.

ಶಾಲಾ ಹಂತಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ತಾರತಮ್ಯ ಮಾಡುವುದು ಕಂಡುಬರುತ್ತಿದೆ. ಶಾಲಾ ಶಿಕ್ಷಕರು ವಿದ್ಯಾರ್ಥಿ ಹಂತದಲ್ಲಿಯೇ ಈ ಬಗ್ಗೆ ಅರಿವು ಮೂಡಿಸುವುದು ಸೂಕ್ತ. ಸರಕಾರಿ ಉದ್ಯೋಗಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಿಡಬೇಕು. ಸಮಾಜದಲ್ಲಿ ನಮ್ಮನ್ನು ನೋಡುವ ರೀತಿಯಲ್ಲಿ ಬದಲಾವಣೆ ಆಗಬೇಕು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಸಭೆಯಲ್ಲಿ ಸಲ್ಲಿಸಿದರು.

ಸಭೆಯಲ್ಲಿ ಎಎಸ್ಪಿ ಟಿ. ಸಿದ್ಧಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.