ಉಡುಪಿ: ಮಳೆಗಾಲದಲ್ಲಿ ಸಾಮಾನ್ಯವಾಗಿ ಬಾಧಿಸುವ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾದಂತಹ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಿ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಉದ್ದೇಶದಿಂದ ನಗರಸಭೆ ನಿರಂತರ ಶ್ರಮಿಸುತ್ತಿದೆ.
ಈ ನಿಟ್ಟಿನಲ್ಲಿ ಈಗಾಗಲೇ ನಗರಸಭೆ ವತಿಯಿಂದ ಸರ್ವೆಗಳನ್ನು ನಡೆಸಲಾಗುತ್ತಿದ್ದು, ಕಳೆದೆರಡು ದಿನಗಳಲ್ಲಿ ನಡೆಸಿದ ಸರ್ವೆಯಲ್ಲಿ ಅಂಗಡಿಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳದೇ ಇದ್ದ 9 ಅಂಗಡಿಗಳ ಮಾಲೀಕರಿಗೆ ಒಟ್ಟು 8,300 ರೂ. ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ 17 ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ 46,500 ರೂ ದಂಡ ವಸೂಲಿ ಮಾಡಲಾಗಿದೆ. ನಗರಸಭೆಯ ಎಚ್ಚರಿಕೆಯ ಹೊರತಾಗಿಯೂ ಅಂಗಡಿ ಮಾಲೀಕರು ಸುತ್ತಮುತ್ತ ಪರಿಸರ ಸ್ವಚ್ಛವಾಗಿಟ್ಟುವಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಅಂತಹ ಅಂಗಡಿ ಮುಂಗಟ್ಟುಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.