ಉಡುಪಿ: ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ.

ಉಡುಪಿ: ಉಡುಪಿ ನಗರದ ಕಡಿಯಾಳಿ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಂಗನವಾಡಿಯ ಸುತ್ತಮುತ್ತಲಿನ ಪರಿಸರ, ಮಕ್ಕಳ ತರಗತಿ ಗೃಹ, ಅಡುಗೆ ಕೋಣೆ, ದಾಸ್ತಾನು ಕೊಠಡಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಕಟ್ಟಡದ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಇತ್ತೀಚಿನ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗುವ ಸಾಧ್ಯತೆ ಇರುತ್ತದೆ. ಸೊಳ್ಳೆಗಳ ಕಚ್ಚುವಿಕೆಯಿಂದ ಮಕ್ಕಳಿಗೆ ರೋಗ- ರುಜಿನಗಳು ಬರುವ ಸಾಧ್ಯತೆ ಇರುತ್ತದೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.

ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ, ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದ ಅವರು, ಉತ್ತಮ ಗುಣಮಟ್ಟದ ಆಹಾರ ವಿತರಣೆಗೆ ಸೂಚನೆ ನೀಡಿದರು. ಮಕ್ಕಳಿಗೆ ನೀಡುತ್ತಿರುವ ಆಟಿಕೆ ವಸ್ತುಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಮಕ್ಕಳಿಂದ ರೈಮ್ಸ್ ಹೇಳಿದ್ದನ್ನು ಕೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್‌ಪಿ ಡಾ. ಅರುಣ್ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.