ಉಡುಪಿ: ನ.8ರಂದು ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ನೂತನ ಕಟ್ಟಡ‌ ಉದ್ಘಾಟನೆ.

ಉಡುಪಿ: ಸುಮಾರು 8 ವರ್ಷಗಳಿಂದ ಉಡುಪಿಯ ಅಂಬಲಪಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ನೂತನ ಸುಸಜ್ಜಿತ ಕಟ್ಟಡವು ಕಿನ್ನಿಮುಲ್ಕಿ ವೇಗಸ್ ಟೌನ್‌ಶಿಪ್ 4ನೇ ಅಡ್ಡ ರಸ್ತೆಯಲ್ಲಿ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ನ.8ರಂದು ಸಂಜೆ 4ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿರುವರು. ನೂತನ ಕಾಲೇಜು ಕಟ್ಟಡವನ್ನು ಗುಜರಾತ್ ಸರ್ವೋದಯ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸೋಮಭಾಯಿ ಮೋದಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಶಾಸಕ ಯಶ್‌ಪಾಲ್ ಸುವರ್ಣ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಡಾ.ಜಿ.ಶಂಕರ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಭಾಗವಹಿಸಲಿರುವರು.ಈ ಕಾಲೇಜು ನಾಲ್ಕು ಮಹಡಿಗಳನ್ನು ಹೊಂದಿದ್ದು ಇದರಲ್ಲಿ ಸುಸಜ್ಜಿತ ಪ್ರಯೋಗಾಲಯ, ವಿಶಾಲವಾದ ಡಿಜಿಟಲ್ ತರಗತಿ ಕೊಠಡಿ, ವಿಶಾಲವಾದ ಗ್ರಂಥಾಲಯಗಳಿದ್ದು, ಇವೆಲ್ಲವೂ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಿದೆ. ದೂರದ ಊರುಗಳಿಂದ ಶಿಕ್ಷಣ ಪಡೆಯಲು ಬರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ವಸತಿ ನಿಲಯಗಳ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಜೂರಾತಿಯೊಂದಿಗೆ ಹೊಸದಾಗಿ ಫಿಸಿಯೋಥೆರಪಿ ಕಾಲೇಜು ತೆರೆಯಲು ಸರಕಾರದಿಂದ ಅನುಮತಿ ಸಿಕ್ಕಿದೆ.

ಈ ಶೈಕ್ಷಣಿಕ ವರ್ಷದಿಂದಲೇ ಬಿ.ಪಿ.ಟಿ. ಕೋರ್ಸ್‌ನ್ನು ಪ್ರಾರಂಭಿಸಿದ್ದು, ಹೆಚ್ಚಿನ ವಿದ್ಯಾರ್ಥಿಗಳ ಇದರ ಪ್ರಯೋಜನವನ್ನು ಪಡೆಯ ಬಹುದಾಗಿದೆ ಎಂದು ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್ ಕೂಡ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.