ಉಡುಪಿ: ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಇವರ ವತಿಯಿಂದ ಡಿಸೆಂಬರ್ 7 ಮತ್ತು 8 ರಂದು ನಡೆಸಲಾಗುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ -150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ನಿಗಧಿಪಡಿಸಲಾಗಿರುವ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.