ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯದ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಮಹಿಳೆಯರಿಗೆ ಭದ್ರತೆ ಇಲ್ಲದಂತೆ ಆಗಿದೆ. ಕಾಲೇಜು ಅಥವಾ ಕೆಲಸಕ್ಕೆ ಹೋದ ಹೆಣ್ಣುಮಕ್ಕಳು ಸುರಕ್ಷಿತವಾಗಿ‌ ಮನೆಗೆ ಬರಲಿಯೆಂದು ಹೆತ್ತವರು ದೇವರಲ್ಲಿ ಪ್ರಾರ್ಥಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಬಾಣಂತಿಯರ ಹಾಗೂ ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದು, ಇದರ ನಿಯಂತ್ರಣಕ್ಕೆ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರಕಾರ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಅನಾಥವಾಗಿರುವ ಮಕ್ಕಳನ್ನು ಸರಕಾರ ದತ್ತು ಪಡೆದು, ಅವರಿಗೆ ಶೈಕ್ಷಣಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು.

ಸರಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರನ್ನು ನೇಮಿಸಿ ಗರ್ಭಿಣಿಯರು ಸುರಕ್ಷಿತವಾಗಿ ಹೆರಿಗೆ ಮಾಡುವಂತಾಗಬೇಕು. ಅಲ್ಲದೆ, ಬಾಣಂತಿಯರ ಸಾವಿನ ಪ್ರಕರಣದ ಉನ್ನತಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.