ಉಡುಪಿ: ಸಂಸತ್ತಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ಇದೇ ಜ.23ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದು, ಈ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 1 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಅಂಬೇಡ್ಕರ್ ನ್ನು ಅವಮಾನಿಸುವ ಮೂಲಕ ಅಮಿತ್ ಶಾ, ಪ್ರಪಂಚದ ಕೋಟ್ಯಾಂತರ ಜನರ ಮನಸ್ಸನ್ನು ಘಾಸಿಗೊಳಿಸಿದ್ದಾರೆ. ಹೀಗಾಗಿ ಅವರು ಅಂಬೇಡ್ಕರ್ ಪ್ರತಿಮೆಯ ಮುಂದೆ ಮಂಡಿಯೂರಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ದೇಶದ ಜನರನ್ನು ಹಿಂದುತ್ವದ ಅಜೆಂಡಾದಲ್ಲಿ ಒಡೆದು ಆಳುತ್ತಿರುವ ಕೇಂದ್ರ ಸರಕಾರವು ಅಮಿತಾ ಶಾರ ಬೆನ್ನಿಗೆ ನಿಂತಿದೆ. ಅವರನ್ನು ಏನೂ ಮಾಡಲು ಆಗಲ್ಲ ಎಂಬ ದಾಷ್ಠ್ಯ ಮನೋಭಾವದಲ್ಲಿದೆ ಎಂದು ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಶ್ಯಾಮ್ ರಾಜ್ ಬಿರ್ತಿ, ಶ್ಯಾಮ್ ಸುಂದರ್ ತೆಕ್ಕಟ್ಟೆ ಇದ್ದರು.












