ಟೋಲ್ ಗೇಟ್ ರದ್ದತಿಗೆ ಕ್ರಮ: ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಉಡುಪಿ: ಪಡುಬಿದ್ರಿ-ಬೆಳ್ಮಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ. ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ನಾನು ಕೊಟ್ಟ ಮಾತನ್ನು ಎಂದೂ ತಪ್ಪಿದವಳಲ್ಲ. ಕಳೆದ ತಿಂಗಳು ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕಾಲೇಜಿನ ರದ್ದತಿ ಆದೇಶವನ್ನು ವಾಪಸ್ ಪಡೆಯಲಾಗಿದೆ. ಕೊಟ್ಟ ಮಾತಿನಂತೆ ನಡೆದ ಫಲವಾಗಿ ಇಂದು ನೌಕರರು ನೆಮ್ಮದಿಯಿಂದ ಇದ್ದಾರೆ. ಈಗ ಟೋಲ್ ಗೇಟ್ ವಿಚಾರದಲ್ಲಿ ಜನರ ಪರ ಇರುವೆ ಎಂದು ಸಚಿವರು ತಿಳಿಸಿದರು.

ಈ ವೇಳೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಮುಖಂಡರಾದ ಪ್ರಸಾದ್ ಕಾಂಚನ್ ಹಾಜರಿದ್ದರು.

ಜನರ ಅಹವಾಲು ಸ್ವೀಕರಿಸಿದ ಸಚಿವೆ;
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿ ನಗರದಲ್ಲಿರುವ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಿಕ್ಕಿರಿದು ಸೇರಿದ ಜನರಿಂದ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಸಮಾಧಾನಚಿತ್ತದಿಂದ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಕಿವಿಯಾದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಅವರಿಂದ ಜಿಲ್ಲೆಯ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದರು. ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಉಪಸ್ಥಿತರಿದ್ದರು.