ಉಡುಪಿ: ಹಿಂದುಳಿದ ವರ್ಗಗಳ ಧೀಮಂತ
ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ
ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸು
ರವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸುವ ಸಲುವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ಕಾರ್ಯಕ್ರಮವು ಉಡುಪಿಯ ಮಿಷನ್ ಕಂಪೌಂಡಿನ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ
ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮವು ನಡೆಯಲಿದೆ. ಡಿ.ದೇವರಾಜ ಅರಸು ರವರ ದೂರದೃಷ್ಠಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸುರವರ ವ್ಯಕ್ತಿತ್ವ ಮತ್ತು ಸಾಧನೆಯ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದ ಅವರು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ
ಪ್ರಬಂಧ, ಭಾಷಣ ಸೇರಿದಂತೆ ಮತ್ತಿತರ ಸ್ಫರ್ಧೆಗಳನ್ನು
ಆಯೋಜಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಬೇಕು ಎಂದರು.
ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದ ಅವರು ಕಾರ್ಯಕ್ರಮವನ್ನು ಶಿಸ್ತು ಬದ್ಧವಾಗಿ ನಡೆಸಲು ವಿವಿಧ ಉಪಸಮಿತಿಗಳನ್ನು ರಚಿಸಲು ಸೂಚನೆ ನೀಡಿದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೂ, ಗಣ್ಯರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.
ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಅವರ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಅನುಕೂಲವಾಗುವಂತೆ ಹೆಚ್ಚಿನ ಪ್ರಚಾರ ನೀಡಬೇಕೆಂದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಪೌರಾಯುಕ್ತ ರಾಯಪ್ಪ, ವಾರ್ತಾಧಿಕಾರಿ
ಮಂಜುನಾಥ್ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.