ಉಡುಪಿ: ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ “ಕನಕದಾಸರ 537ನೇ ಜಯಂತಿ ಮಹೋತ್ಸವ” ಹಾಗೂ 351 ಕುಂಭ ಕಳಸ ಮೆರವಣಿಗೆ ಇದೇ ನ. 18ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಸಂಘದ ಖಜಾಂಚಿ ವಗೇನಪ್ಪ ಎಳಮಲಿ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಗಂಟೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್. ಕುಂಭ ಕಳಸ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಉಡುಪಿ ಜೋಡುಕಟ್ಟೆಯಿಂದ ಕೃಷ್ಣಮಠದ ಕನಕದಾಸ ಮಂದಿರದವರೆಗೆ ಮೆರವಣಿಗೆ ನಡೆಯಲಿದೆ ಎಂದರು.
ಮಧ್ಯಾಹ್ನ 1ಗಂಟೆಗೆ ಕನಕದಾಸರ ಪ್ರತಿಮೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1.30ರಿಂದ 2.30ರ ವರೆಗೆ ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯ ಮತ್ತು ಬಳಗದವರಿಂದ ಕನಕದಾಸರ ಕೀರ್ತನೆಗಳನ್ನು ಹಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು, ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ವಿದ್ವಾನ್ ಗೋಪಾಲಾಚಾರ್ಯ ಅವರಿಗೆ ‘ಭಕ್ತ ಕನಕ ಪುರಸ್ಕಾರ’ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಉಪಾಧ್ಯಕ್ಷ ಗ್ಯಾನಪ್ಪ ಎಚ್. ಕುರಿ, ಜೊತೆ ಕಾರ್ಯದರ್ಶಿ ದೇವು ಎಸ್. ಉಪಸ್ಥಿತರಿದ್ದರು.