ಪಹಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ಉಗ್ರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿ ತಾಣದಲ್ಲಿ ಪ್ರಾಕೃತಿಕ ಸೌಂದರ್ಯವನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಕ್ಕೆ ನ್ಯಾಯ ಒದಗಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದಿದ್ದಾರೆ.
ಉಗ್ರರ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದಿದ್ದಾರೆ.
ಪ್ರಧಾನಿ ಮೋದಿ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ದಾಳಿಯಾಗಿರುವ ಸ್ಥಳಕ್ಕೆ ಭೇಟಿನ ನೀಡಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.
ಪೊಲೀಸ್ ಅಧಿಕಾರಿಯೊಂದಿಗೆ ವೀಡಿಯೊ ಕಾನ್ಫರೆನ್ಸ್:
ಗೃಹ ಸಚಿವ ಅಮಿತ್ ಶಾ ತಮ್ಮ ದೆಹಲಿಯ ಮನೆಯಲ್ಲಿ ವಿಶೇಷ ಸಭೆ ನಡೆಸಿದ್ದು, ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಅರೆಸೈನಿಕ ಭದ್ರತಾ ಸಂಸ್ಥೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲ್ಲ, ನಾವು ಅತ್ಯಂತ ಕಠಿಣ ಪರಿಣಾಮಗಳೊಂದಿಗೆ ದುಷ್ಕರ್ಮಿಗಳ ಮೇಲೆ ತೀವ್ರವಾಗಿ ದಾಳಿ ಮಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದು, ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶೀಘ್ರದಲ್ಲೇ ಶ್ರೀನಗರಕ್ಕೆ ಭೇಟಿ ನೀಡುತ್ತೇನೆ ಎಂದಿದ್ದಾರೆ.
ಉಗ್ರರ ಏಕಾಏಕಿ ದಾಳಿಯ ಬಳಿಕ ಹೆದರಿದ ಹಲವು ಮಹಿಳೆಯರು ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವುದನ್ನು ತೋರಿಸುವ ಹೃದಯ ವಿದ್ರಾವಲ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ನಾವು ತಿಂಡಿ ತಿನ್ನುತ್ತಿದ್ದಾಗ ಒಬ್ಬ ವ್ಯಕ್ತಿ ಬಂದು ನನ್ನ ಗಂಡನಿಗೆ ಗುಂಡು ಹಾರಿಸಿದ ಎಂದು ಒಬ್ಬರು ಹೇಳಿದರು. ಮುಖದ ಮೇಲೆ ರಕ್ತ ಚೆಲ್ಲಿದ ಮತ್ತೊಬ್ಬ ಮಹಿಳೆ, ವೀಡಿಯೊ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯತ್ತ ಅಸಹಾಯಕಳಾಗಿ ನೋಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.












