ಬೈಲೂರು ಪರಶುರಾಮ ಥೀಮ್ ಪಾರ್ಕ್ ಪ್ರಕರಣ; ಶಿಲ್ಪಿ ಕೃಷ್ಣ ನಾಯ್ಕ್ ಬಂಧನ

ಉಡುಪಿ: ಬೈಲೂರು ಥೀಮ್ ಪಾರ್ಕ್ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ್ ಎಂಬವರನ್ನು ಪುದುಚೆರಿಯ ಮಾಹೆ ಎಂಬಲ್ಲಿ ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಆ ಬಳಿಕ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಮಾಹೆಯಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.