ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದೆ.
ಶಿಕ್ಷೆಗೊಳಗಾದ ಆರೋಪಿ ಹುಬ್ಬಳ್ಳಿ ನವನಗರ ಅಮರಗೋಳ್ ಬಸವಕಾಲೊನಿಯ ವಿವೇಕ್ ಅಂಬಿಗೇರ(20).
ಪ್ರಕರಣದ ವಿವರ:
ಆರೋಪಿ 2023ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ತೊಕೊಟ್ಟಿನ ಲಾಡ್ಜ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದು, ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾಗಿದ್ದ ಶಾಂತಿನಾಥ ಜೆ.ವಣ್ಣೂರ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನ ಪರ 15 ಸಾಕ್ಷಿದಾರರನ್ನು ವಿಚಾರಿಸಲಾಗಿದ್ದು ಪ್ರಕರಣದ ಸಾಕ್ಷ್ಯ, ದಾಖಲೆಗಳು ಮತ್ತು ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಆರೋಪಿತನ ವಿರುದ್ಧ ಅಪರಾಧವು ಸಾಬೀತಾಗಿದೆ ಎಂದು ತೀರ್ಮಾನಿಸಿ ಜು.19ರಂದು ಆರೋಪಿಗೆ ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 6 ರಂತೆ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣದಲ್ಲಿ 40,000 ರೂ.ಗಳನ್ನು ನೊಂದ ಬಾಲಕಿಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಹಾಗೂ ನೊಂದ ಬಾಲಕಿಗೆ 1,60,000 ರೂ. ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ಅವರು ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದರು.