ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು, ದೇಶದ ಆರ್ಥಿಕತೆ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸಹಕಾರಿ ಕ್ಷೇತ್ರ ಪೂರಕವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಎಲ್ಲವನ್ನು ಮಾಡಬಹುದು. ಕೇವಲ ಠೇವಣಿ ಸಂಗ್ರಹ ಮಾತ್ರ ಸಾಧನೆಯಲ್ಲ, ಎಲ್ಲ ವ್ಯವಹಾರಗಳನ್ನು ಸಹಕಾರಿ ಕ್ಷೇತ್ರದಲ್ಲಿ ಮಾಡಲು ಕೇಂದ್ರ ಸರಕಾರ ಅವಕಾಶ ಕಲ್ಪಿಸಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ಮಹಿಳೆಯರ ಸಬಲೀಕರಣ ಆಗುತ್ತಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜೊತೆಗೆ ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳೆತರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಅಂತಹ ಶಕ್ತಿ ಅವರಿಗಿದೆ. ಆದರೆ ಅವರಿಗೆ ಮಾಹಿತಿಯ ಕೊರತೆ ಇದೆ. ಆಡಳಿತ ಮಂಡಳಿಗೆ ಏನು ಜವಾಬ್ದಾರಿ, ನಮ್ಮ ಕರ್ತವ್ಯ, ಹಕ್ಕುಗಳು ಏನು ಎಂಬ ಬಗ್ಗೆ ಕೊರತೆ ಇದೆ. ಆಡಳಿತ ಮಂಡಳಿಯ ಸದಸ್ಯನಿಗೆ ಇಡೀ ಸಂಸ್ಥೆಯ ವ್ಯವಹಾರಗಳ ಬಗ್ಗೆ ಅರಿವು ಇರಬೇಕು. ತರಬೇತಿಯಲ್ಲಿ ಹೇಳಿಕೊಡುವ ಸಲಹೆ ಸೂಚನೆಗಳನ್ನು ಸರಿಯಾಗಿ ಕಲಿತುಕೊಂಡಲ್ಲಿ ವ್ಯವಸ್ಥಿತ ಆಡಳಿತ ನೀಡಲು ಸಾಧ್ಯ ಎಂದು ಹೇಳಿದರು.
ಗೃಹನಿರ್ಮಾಣ ಸಹಕಾರ ಸಂಘದ ಅಧ್ಯಕ್ಷೆ ಇಂದು ರಮಾನಂದ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ನಿರ್ದೇಶಕ ಕಟಪಾಡಿ ಶಂಕರ ಪೂಜಾರಿ, ಜಿಲ್ಲಾ ಸಹಾಕರ ಸಂಘಗಳ ಉಪನಿಬಂಧಕಿ ಕೆ.ಆರ್.ಲಾವಣ್ಯ, ಲೆಕ್ಕಪರಿಶೋಧನಾ ಇಲಾಖೆ ಉಪನಿಬಂಧಕಿ ರೇಣುಕಾ, ತರಬೇತುದಾರರಾದ ಬಿಂದು ಬಿ.ನಾಯಕ್, ಮನೋಜ್ ಕರ್ಕೆರ ಉಪಸ್ಥಿತರಿದ್ದರು.