ಉಡುಪಿ: ಉಡುಪಿಯ ಸಮನ ಮನಸ್ಕ ಸಂಘಟನೆಯ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ‘ಜೈ ಭಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನದ ಅಂಗವಾಗಿ ‘ಗಾಂಧಿ ಭಾರತ’ ಬೃಹತ್ ಸಮಾವೇಶವನ್ನು ಇದೇ ಮಾ.23ರಂದು ಸಂಜೆ 4ಗಂಟೆಗೆ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3.30ಕ್ಕೆ ನಗರದ ಕೆ.ಎಂ. ಮಾರ್ಗದಲ್ಲಿರುವ ನಿತ್ಯಾನಂದ ಮಂದಿರದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಬಳಿಕ ಮೆರವಣಿಗೆಯು ತ್ರಿವೇಣಿ ಸರ್ಕಲ್ ನಲ್ಲಿ ಯೂಟರ್ನ್ ತೆಗೆದುಕೊಂಡು ಕೋರ್ಟ್ ರಸ್ತೆ ಮೂಲಕ ಮೈದಾನಕ್ಕೆ ತೆರಳಲಿದೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಭಾಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶೆಟ್ಟಿ, ಪ್ರಶಾಂತ್ ಜತ್ತನ್ ಇದ್ದರು.












