ಉಡುಪಿ: ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು.
ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲೆಯ ಐವರು ಶಾಸಕರು, ಜಿಲ್ಲಾಧ್ಯಕ್ಷ ಸೇರಿದಂತೆ ವಿವಿಧ ಸ್ತರದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಸರಕಾರಿ ಶಾಲೆಗಳ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಮಾಡಿಲ್ಲ. ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಪೂರಕವಾದ ಹೆಚ್ಚುವರಿ ಅನುದಾನ ನೀಡದೇ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಅನುದಾನ ನೀಡದೇ ಬಡವರು ಸೌಲಭ್ಯ ವಂಚಿತರಾಗುತ್ತಿದ್ದಾರೆ. ರಾಜ್ಯ ಸರಕಾರದ 2025-26 ನೇ ಸಾಲಿನ ಬಜೆಟ್‌ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಶಾಸಕರು ಮನವಿ ನೀಡಿದ್ದರೂ, ಸಿಎಂ ವಿಶೇಷ ಅನುದಾನ ನೀಡಿಲ್ಲ. ಆ ಮೂಲಕ ಉಡುಪಿ ಜಿಲ್ಲೆಯನ್ನು ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ನಗರ ಅಧ್ಯಕ್ಷ ದಿನೇಶ್ ಆಮೀನ್, ಪ್ರ.ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿ.ಬಿ.ಶೆಟ್ಟಿ, ನಗರ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಉಪಸ್ಥಿತರಿದ್ದರು.












