ಉಡುಪಿ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಶೇ. 15 ರಷ್ಟು ಹೆಚ್ಚು ಮಳೆಯಾಗಿ, ರಸ್ತೆ, ಸೇತುವೆ, ವಿದ್ಯುತ್ ಸರಬರಾಜು ಕಂಬ, ಟ್ರಾನ್ಸ್ಫಾರ್ಮ್ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಮತ್ತಿತರ ಹಾನಿಯಿಂದಾಗಿ 28721.21 ಲಕ್ಷ ರೂ. ಗಳಷ್ಟು ಅಂದಾಜು ನಷ್ಟ ಉಂಟಾಗಿದೆ. ಇವುಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.
ಯಾವುದೇ ಇಲಾಖೆಗಳು ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನವೆಂಬರ್ ಅಂತ್ಯದ ಒಳಗಾಗಿ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದ ಅವರು, ಶಾಲಾ, ಅಂಗನವಾಡಿ ತುರ್ತು ದುರಸ್ಥಿ ಕಾಮಗಾರಿ ಕೈಗೊಳ್ಳಲು ಅನುದಾನದ ಅವಶ್ಯಕತೆ ಇದ್ದಲ್ಲಿ ಕೂಡಲೆ ಮಾಹಿತಿ ನೀಡುವಂತೆ ತಿಳಿಸಿದರು.
ವಾತಾವರಣವನ್ನು ಗಮನಿಸಿದಾಗ ಚಂಡಮಾರುತ ಪರಿಣಾಮದಿಂದ ಈ ತಿಂಗಳ ಅಂತ್ಯದವರೆಗೂ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಹಿಂಗಾರು ಸಂದರ್ಭದಲ್ಲಿ ಆಸ್ತಿ-ಪಾಸ್ತಿ ಹಾನಿಯಾಗದಂತೆ, ಮನೆಹಾನಿ ಆದ ಸಂದರ್ಭದಲ್ಲಿ ಅವರುಗಳನ್ನು ಕಾಳಜಿ ಕೇಂದ್ರ ಅಥವಾ ಇತರೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವಂತೆ ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜೊತೆಗೆ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮಳೆ ನಿಂತ ಹಿನ್ನೆಲೆ ಚರಂಡಿಯಲ್ಲಿ, ಕಾಲುವೆಗಳಲ್ಲಿ, ತೋಡುಗಳಲ್ಲಿ ಸಿಲುಕಿರುವ ಕಸ, ಕಡ್ಡಿ, ತರಗೆಲೆಗಳನ್ನು ಕೂಡಲೇ ತೆರವುಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ, ಎಲ್ಲಾ ಡ್ಯಾಂಗಳ ಗುಣಮಟ್ಟವನ್ನು ಆಗಿಂದಾಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಸರ್ವೇ ಕಾರ್ಯದಲ್ಲಿ ಯಾವುದೇ ಫಲಾನುಭವಿಗಳ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದ ಅವರು, ಇಲಾಖೆಗಳಿಗೆ ಬಿಡುಗಡೆಯಾಗುವ ಅನುದಾನದಲ್ಲಿ ಮೂಲಭೂತ ಸೌಲಭ್ಯಗಳ ದುರಸ್ಥಿಗೆ ಸಂಬಂಧಿಸಿದಂತೆ ವಿಶೇಷ ಪ್ರಸ್ತಾವನೆಗಳನ್ನು ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸಿ, ಬಂದ ಅನುದಾನದಲ್ಲಿ ಮೂಲಭೂತ ಸೌಕರ್ಯಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಗಮನಹರಿಸಬೇಕು ಎಂದರು.
ಮಳೆ ನಿಂತ ಹಿನ್ನೆಲೆ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಲುಷಿತ ನೀರು ಶುದ್ಧ ಕುಡಿಯುವ ನೀರಿಗೆ ಸೇರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ಕುಡಿಯಲು ಯೋಗ್ಯವಾಗಿದ್ದಲ್ಲಿ ಮಾತ್ರ ಸೇವನೆಗೆ ಅವಕಾಶ ನೀಡಬೇಕು. ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಮರಣ ಸಂಭವಿಸುವ ಸಾಧ್ಯತೆ ಇದ್ದು, ಬಾವಿ ಹಾಗೂ ನದಿ ನೀರಿಗೆ ಕೊಳಚೆ ನೀರು ಸೇರದಂತೆ ಸೂಕ್ತ ಕ್ರಮ ವಹಿಸಬೇಕು ಎಂದ ಅವರು, ಸಾರ್ವಜನಿಕ ಹಾಗೂ ಸರ್ಕಾರಿ ಬಾವಿಗಳನ್ನು ಸ್ವಚ್ಛಗೊಳಿಸಲು ತಕ್ಷಣವೇ ಮುಂದಾಗಬೇಕು ಎಂದರು.
ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 11.39 ಕೋಟಿ ರೂ. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 165.70 ಲಕ್ಷ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಅನುದಾನದಲ್ಲಿ ಯಾವುದೇ ಕೊರತೆ ಇರುವುದಿಲ್ಲ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮೀಷನರ್ ಮಹೇಶ್ಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.












