ಉಡುಪಿ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರು ಬಹಳ ಮಹತ್ವದ ಪಾತ್ರ ವಹಿಸಿದ್ದರು. ಯುವ ವಕೀಲರು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಸಮಾಜದಲ್ಲಿ ನ್ಯಾಯ ನೆಲೆಯೂರುವಂತೆ ಮಾಡುವ ಜವಾಬ್ದಾರಿ ವಕೀಲರ ಮೇಲೆ ಇದೆ ಎಂದು ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಹೇಳಿದರು.
ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹೈಕೋರ್ಟಿನ 2025ನೇ ಸಾಲಿನ ಕ್ಯಾಲೆಂಡರನ್ನು ಹೋಲುವ ಸಂಘದಿಂದ ಹೊರತಂದಿರುವ ನೂತನ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ನ್ಯಾಯಾಲಯ ಮತ್ತು ಸಂಘದ ಶತಮಾನೋತ್ತರ ರಜತ ಮಹೋತ್ಸವಕ್ಕೆ ಸಹಕರಿಸಿದ ನ್ಯಾಯಾಧೀಶರು, ಸರಕಾರಿ ಅಭಿಯೋಜಕರು, ವಕೀಲರ ಸಂಘದ ಸದಸ್ಯರನ್ನು ಗೌರವಿಸಲಾಯಿತು.
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್. ವಂದಿಸಿದರು. ನ್ಯಾಯವಾದಿ ಸಹನಾ ಕುಂದರ್ ಕಾರ್ಯಕ್ರಮ ನಿರೂಪಿಸಿದರು.