ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಶಿವಮೊಗ್ಗ ಜಿಲ್ಲಾಧಿಕಾರಿಗೆ ದೂರು ನೀಡಿರುವುದಾಗಿ ವರದಿಯಾಗಿದೆ.
ಬುಧವಾರದಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ವೇಳೆ ಬ್ರಾಹ್ಮಣ ಸಮುದಾಯದವರ ಜನಿವಾರಗಳನ್ನು ಒತ್ತಾಯಪೂರ್ವಕವಾಗಿ ತೆಗೆಸಲಾಗಿದೆ. ಇದು ಧಾರ್ಮಿಕ ಭಾವನೆಗಳ ಮೇಲೆ ಮಾಡಿರುವ ಪ್ರಹಾರವಾಗಿದ್ದು, ಇದರಿಂದ ಪೋಷಕರಿಗೆ ಅನ್ಯಾಯವಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಬ್ರಾಹ್ಮಣ ಮಹಾಸಭಾ ತಿಳಿಸಿದೆ
ಆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.












