ಉಡುಪಿ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಇಂದು ಧರಣಿ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಧರಣಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನಾಡಿನ ಜನತೆ ಬಗ್ಗೆ ಗೌರವ ಇದ್ದರೆ, ಪ್ರಜಾಪ್ರಭುತ್ವದ ಬಗ್ಗೆ ವಿಶ್ವಾಸ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಈ ಮೂಲಕ ದೇಶದಲ್ಲಿ ರಾಜ್ಯದ ಗೌರವ ಉಳಿಸುವ ಕಾರ್ಯ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸದಾ ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ ಎನ್ನುತ್ತಿದ್ದ ಸಿದ್ದರಾಮಯ್ಯನವರು ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನೈತಿಕತೆ ಉಳಿಸಿಕೊಳ್ಳಬೇಕು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಬಿಜೆಪಿಯ ಹೋರಾಟ ನಿಲ್ಲದು ಎಂದು ಹೇಳಿದರು.
ಧರಣಿಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡರಾದ ದಿನಕರ ಶೆಟ್ಟಿ ಹೆರ್ಗ, ಶ್ರೀಶ ನಾಯಕ್, ವಿಜಯ ಕೊಡವೂರು, ದಿನೇಶ್ ಅಮೀನ್, ಶ್ರೀನಿಧಿ ಹೆಗ್ಡೆ, ಶ್ಯಾಮಲಾ ಕುಂದರ್, ರಾಜೇಶ್ ಕಾವೇರಿ, ನಯನ ಗಣೇಶ್, ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ, ಸಂಧ್ಯಾ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.