ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ
ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ
ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ
ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರು ಅಂದು
ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪಥ ಸಂಚಲನ ನಡೆಯಲಿದೆ. ವೈವಿಧ್ಯಮಯ
ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ನೀಡಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸವಲತ್ತುಗಳನ್ನು ಸಹ
ವಿತರಿಸಲಾಗುವುದು ಎಂದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ತಯಾರಿಸಿ, ಜನಪ್ರತಿನಿಧಿಗಳಿಗೆ,
ಗಣ್ಯ ವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ ಟಿ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.