ಆಗಸ್ಟ್ 20 ರಿಂದ 22 ರ ವರೆಗೆ ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆ

ಉಡುಪಿ: ಸಾಮಾಜಿಕ ಸುಧಾರಣೆಯ ಹರಿಕಾರ ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಿಂದ 22 ರ ವರೆಗೆ ಜಿಲ್ಲಾ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ, ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡವರ ಬದುಕಿನಲ್ಲಿ ಹೊಸ ಭರವಸೆಯನ್ನು ತಂದ ಡಿ. ದೇವರಾಜ ಅರಸು ರಾಜ್ಯದ ಸಾಮಾಜಿಕ, ಆರ್ಥಿಕ ಆಂದೋಲನದ ಮೂಲಕ ಹಲವಾರು ಜನಹಿತ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರು. ಅರಸುರವರ ದೂರದೃಷ್ಟಿ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಳ ಬಗ್ಗೆ ಅವರಿಗಿದ್ದ ಬದ್ಧತೆಯ ಹಿನ್ನೆಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ವಿಶಿಷ್ಟ ರೀತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭ ನೇಕಾರರು, ಕಮ್ಮಾರರು, ಕುಂಬಾರ, ಬಡಗಿ, ವಿಶ್ವಕರ್ಮ ಇತ್ಯಾದಿ ಕುಲಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲು, ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಂದ ಹಾಗೂ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು, ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ದೇವರಾಜ ಅರಸು ಅವರ ಕುರಿತ ಪ್ರಬಂಧ ಸ್ಪರ್ಧೆ, ಭಾಷಣ ಸೇರಿದಂತೆ ವಿವಿಧ ಸ್ಪರ್ಧೆ, ವಿದ್ಯಾರ್ಥಿನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ, ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾದ ಹಿಂದುಳಿದ ವರ್ಗಗಳ ಶ್ರೇಯೋಭೀವೃದ್ಧಿಗೆ ಶ್ರಮಿಸಿರುವ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳಿಗೆ ನಗದು ಹಾಗೂ ಫಲಕದ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ನಿಗಮಗಳ ವ್ಯವಸ್ಥಾಪಕರು, ವಾರ್ತಾಧಿಕಾರಿ ಮಂಜುನಾಥ್ ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.