ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸೆ.7ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

800 ಕೆಪಿಎಸ್‌‍ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 5 ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.

1 ಸಾವಿರವಿದ್ದ ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 4 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಹಾಜರಾತಿ ಶಾಲೆಗಳಲ್ಲಿ ಹೆಚ್ಚಲು ಮೊಟ್ಟೆ ಇಲ್ಲವೇ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಶಿಕ್ಷಣ ಸಚಿವರು ಬೋಧಿಸಿದರು.