ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ 300 ಬಾಕ್ಸ್ ಅಕ್ರಮ ಮದ್ಯ ವಶ

ಉಡುಪಿ: ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 300 ಬಾಕ್ಸ್ ಮದ್ಯವನ್ನು ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮದ್ಯ ಸಾಗಾಟಕ್ಕೆ ಬಳಸಿದ್ದ ಮಹೀಂದ್ರ ಪಿಕಪ್ ವಾಹನ ಹಾಗೂ ಮಾರುತಿ ಸ್ವಿಫ್ಟ್ ಡಿಸೈರ್ ಕಾರನ್ನು ವಶಕ್ಕೆ ಪಡೆಯಲಾಗಿದೆ.

‘ಬ್ಲೂ ಓಷಿಯನ್ ವಿಸ್ಕಿ’ ಬ್ರ್ಯಾಂಡ್‌ನ ಮದ್ಯವನ್ನು ಗೋವಾದಿಂದ ಮಂಗಳೂರಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೆಜಮಾಡಿ ಚೆಕ್‌ಪೋಸ್ಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮ ಮದ್ಯ ಸಾಗಾಟ ಜಾಲ ಪತ್ತೆಯಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.