ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿದೆ 476 ಹುದ್ದೆಗಳು, ಅರ್ಹತೆ ಏನಿರಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 460 ಅಗ್ನಿಶಾಮಕ ಹಾಗೂ 16 ಅಗ್ನಿಶಾಮಕ ಠಾಣಾಧಿಕಾರಿ ಸೇರಿದಂತೆ ಒಟ್ಟು 476 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಭಾಷಾ ವಿಷಯದೊಂದಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ ರಸಾಯನಶಾಸ್ತ್ರ ವಿಷಯದೊಂದಿಗೆ ಪದವಿ ಪಡೆದಿರಬೇಕು.

ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 31 ವರ್ಷ ನಿಗದಿಪಡಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಸಾಮಾನ್ಯ ವರ್ಗ ಹಾಗೂ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹300 ಶುಲ್ಕ ನಿಗದಿಪಡಿಸಲಾಗಿದೆ.

ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ ಲಿಖಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಗ್ನಿಶಾಮಕ ಸಿಬ್ಬಂದಿ ಹುದ್ದೆಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ನೇಮಕಾತಿ ಮಾಡಲಾಗುತ್ತದೆ.

ನವೆಂಬರ್ 23ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಡಿಸೆಂಬರ್ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕೃತ ವೆಬ್‌ಸೈಟ್ ksfes.karnataka.gov.in ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.