ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: 52 ಹೊಸ ಮುಖಗಳು, 8 ಮಹಿಳೆಯರಿಗೆ ಮಣೆ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಟ್ಟಿಯನ್ನು ಘೋಷಿಸಿದರು. ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳು ಮತ್ತು 8 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ತನ್ನ ಸಾಂಪ್ರದಾಯಿಕ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಿದ್ದರೆ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರು ತಮ್ಮ ತಂದೆಯ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಕನಕಪುರದಿಂದ ಸಚಿವ ಆರ್ ಅಶೋಕ್ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಕರ್ನಾಟಕದ ವಸತಿ ಸಚಿವ ವಿ ಸೋಮಣ್ಣ ಅವರು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ.

52 ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದ್ದು, ಒಬಿಸಿ -32, ಎಸ್ಸಿ – 30, ಎಸ್ಟಿ – 16 ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಜನರಿಗೂ ಟಿಕೆಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಎಸ್‌ ಅಂಗಾರ ಜಾಗಕ್ಕೆ ಭಾಗೀರಥಿ ಮುರುಳ್ಯ ಎನ್ನುವ ಮಹಿಳೆಗೆ ಟಿಕೆಟ್ ನೀಡಲಾಗಿದೆ. ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಗೌಡ ಅವರನ್ನು ಕಣಕ್ಕಿಳಿಸಲಾಗಿದೆ.

ಉಡುಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಬದಲಿಗೆ ಯಶಪಾಲ್ ಸುವರ್ಣ, ಕಾಪು ಕ್ಷೇತ್ರದಲ್ಲಿ ಲಾಲಾಜಿ ಆರ್ ಮೆಂಡನ್ ಬದಲಿಗೆ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಕುಂದಾಪುರದಲ್ಲಿ ನಿರೀಕ್ಷೆಯಂತೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಥಾನಕ್ಕೆ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಅಭ್ಯರ್ಥಿಯ ಹೆಸರು ಪಟ್ಟಿಯಲ್ಲಿ ನೀಡಲಾಗಿಲ್ಲ.