ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ.
ದರ್ಶನ್ ಅವರ ದೇಹದ ತೂಕ ಕೂಡ ತುಂಬಾ ಕಡಿಮೆಯಾಗಿದೆ. ಮನೆ ಊಟಕ್ಕೆ ಅನುಮತಿ ನೀಡುವಂತೆ ಮಾಡಿದ್ದ ಕೋರಿಕೆಯನ್ನು ಮನ್ನಿಸಿಲ್ಲ, ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ. ಜೈಲು ಅಧಿಕಾರಿಗಳ ನಿರಾಕರಣೆ ಕಾನೂನುಬಾಹಿರ ಮತ್ತು ಅಮಾನವೀಯವಾಗಿದೆ. ಇದೇ ರೀತಿ ಮುಂದುವರಿದರೆ ದರ್ಶನ್ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಮನೆ ಊಟಕ್ಕೆ ಅನುಮತಿ ನೀಡಿದರೆ ಯಾರಿಗೂ ತೊಂದರೆಯಾಗುವುದಿಲ್ಲ. ಇದರಿಂದ ಸರಕಾರದ ಬೊಕ್ಕಸಕ್ಕೂ ಹೊರೆ ಕಡಿಮೆಯಾಗುತ್ತದೆ. ಹೀಗಾಗಿ ಕುಟುಂಬದವರಿಂದ ಮನೆ ಊಟ ಪಡೆಯಲು ಅನುಮತಿ ನೀಡಬೇಕು ಎಂದು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.