ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ–2018 ಅನ್ನು ಕೈಬಿಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರ್ಮಿಕರು ಹೋರಾಟದ ಮೂಲಕ ಗಳಿಸಿದ 44 ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು, ಮಾಲೀಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಹೀಗೆ ತಿದ್ದುಪಡಿ ಮಾಡಲು ಹೊರಟಿರುವ ಕಾನೂನುಗಳಲ್ಲಿ ಕೋಟ್ಯಾಂತರ ಕಟ್ಟಡ ಕಾರ್ಮಿಕರು ನೋಂದಣಿಯಾಗಿರುವ ಮತ್ತು ಸೌಲಭ್ಯ ಪಡೆಯುತ್ತಿರುವ ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು 1996’, ಕಟ್ಟಡ ಹಾಗೂ ಇತರೆ ಕಾರ್ಮಿಕ ಸೆಸ್ ಕಾನೂನು 1996 ಕಾಯ್ದೆಗಳು ಸೇರಿವೆ ಎಂಬುವುದು ಅತ್ಯಂತ ಆತಂಕದ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿಯ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆಯನ್ನು ಜಾರಿಗೊಳಿಸಿದರೆ ಈಗಿರುವ ಎರಡು ಕಟ್ಟಡ ಕಾರ್ಮಿಕ ಕಾನೂನುಗಳು ರದ್ದಾಗಲಿವೆ. ಕರ್ನಾಟಕ ಸುಮಾರು 15 ಲಕ್ಷ ನೊಂದಾಯಿತ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ರದ್ದಾಗುತ್ತದೆ. ಪಿಂಚಣಿ, ಹೆರಿಗೆ ಭತ್ಯೆ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸೌಲಭ್ಯಗಳಿಂದ ಕಾರ್ಮಿಕರು ವಂಚಿತರಾಗಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಯಾವುದೇ ಚರ್ಚೆ ನಡೆಸದೇ ಕಾರ್ಮಿಕ ಪ್ರತಿನಿಧಿಗಳು ಹಾಗೂ ಕಾರ್ಮಿಕ ಸಂಘಗಳ ಅಭಿಪ್ರಾಯಗಳನ್ನು ಲೆಕ್ಕಿಸದೇ ಸಂಸತ್ತಿನಲ್ಲಿ ಅಂಗೀಕರಿಸಲು ಹೊರಟಿರುವುದು ಖಂಡನೀಯ ಎಂದರು.
ಸಿಐಟಿಯು ಜಿಲ್ಲಾಧ್ಯಕ್ಷ ಪಿ. ವಿಶ್ವನಾಥ ರೈ ಮಾತನಾಡಿದರು. ಸಿಐಟಿಯು ಮುಖಂಡರಾದ ಗಣೇಶ್ ನಾಯಕ್, ಎಚ್. ನರಸಿಂಹ, ದಾಸ್ ಭಂಡಾರಿ, ಎಚ್. ವಿಠಲ್, ಕವಿರಾಜ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.