ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಚು ರೂಪಿಸಿದೆ

ಉಡುಪಿ: ದಿಲ್ಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ಮಾಡಿದ ರೀತಿಯಲ್ಲೇ ಬಿಜೆಪಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಂಚು ರೂಪಿಸಿದೆ. ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ರಾಜ್ಯಪಾಲರ ಆದೇಶದಿಂದ ಏನೂ ಆಗುವುದಿಲ್ಲ ಎಂದು ರಾಜ್ಯ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಕಾಂಗ್ರೆಸ್ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಸಚಿವರಾದ ಬಳಿಕ ಮೊದಲ ಬಾರಿ ಉಡುಪಿಗೆ ಆಗಮಿಸಿದ ಅವರು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬಿಜೆಪಿ ಪೂರ್ವಯೋಜಿತ ಸಂಚಿನೊಂದಿಗೆ ರಾಜ್ಯಪಾಲರ ಮೂಲಕ ಈ ಕಾರ್ಯ ಮಾಡಿಸಿದೆ. ಬೆಂಗಳೂರಿನಿಂದ ಮೈಸೂರುವರೆಗೆ ಹಮ್ಮಿಕೊಂಡ ಅವರ ರ‌್ಯಾಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಅವರು ಹತಾಶೆಯಿಂದ ಹೀಗೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಯಾವುದೇ ಪುರಾವೆಗಳಿಲ್ಲ ಎಂದರು.

ಹೀಗಾಗಿ ನಮ್ಮ ಕಾರ್ಯಕರ್ತರು ದೈರ್ಯದಿಂದಿರಬೇಕು. ಮುಖ್ಯಮಂತ್ರಿಗಳ ಬೆನ್ನಿಗೆ ನಿಂತು ನಾವೆಲ್ಲರೂ ಬಿಜೆಪಿಯ ಹುನ್ನಾರವನ್ನು ಜನತೆಗೆ ಮುಟ್ಟಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್ ಉಪಸ್ಥಿತರಿದ್ದರು.