ಶೋಭಾ ಕರಂದ್ಲಾಜೆ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

ಉಡುಪಿ: ಶೋಭಾ ಕರಂದ್ಲಾಜೆ ಬಗ್ಗೆ ಮಹಿಳೆಯಾಗಿ ವೈಯಕ್ತಿಕ ಗೌರವ ಇದೆ. ಆದರೆ ಅವರು ಯಾವಾಗಲೂ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮುಡಾ ಹಗರಣದ ದಾಖಲೆ ಸುಟ್ಟಿದ್ದಾರೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಉಡುಪಿಯಲ್ಲಿ ತಿರುಗೇಟು ನೀಡಿದ ಅವರು, ಮೂಡಾ ಮೇಲೆ ರಾಜಕೀಯ ಪ್ರೇರಿತ ಇಡಿ ರೈಡ್ ನಡೆಯುತ್ತಿದೆ. ರಾಜ್ಯಪಾಲರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಹುನ್ನಾರವಾಗಿದೆ ಎಂದು ಕಿಡಿಕಾರಿದರು.
ಡಾ. ಕಸ್ತೂರಿ ರಂಗನ್ ವರದಿ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸುದೀರ್ಘ ಚರ್ಚೆಯಾಗಿದೆ. ಸದ್ಯ ನೀತಿಸಂಹಿತೆ ಇರುವ ಕಾರಣ ಈಗ ಯಾವುದೇ ಭರವಸೆ ನೀಡುವುದಿಲ್ಲ. ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರಕ್ಕೆ ಬರಲಿದ್ದೇವೆ ಎಂದು ತಿಳಿಸಿದರು.

ಪಂಚಮಸಾಲಿ 2A ಮೀಸಲಾತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಭೆಯಲ್ಲಿ ನಡೆದ ವಿಚಾರವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕೇಂದ್ರವನ್ನು ಬಿಜೆಪಿಗರು ಪ್ರಶ್ನಿಸಲಿ:
ರಾಜ್ಯ ಸರ್ಕಾರದಿಂದ ಕರಾವಳಿಗೆ ಅನ್ಯಾಯ ಆಗುತ್ತಿದೆ. ಕಾಂಗ್ರೆಸ್ ನಿಂದ ಬಿಡಿಗಾಸು ಅನುದಾನ ಇಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರದಿಂದಾಗುವ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಏಕೆ ಧ್ವನಿ ಎತ್ತುತ್ತಿಲ್ಲ? ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆದರೆ ಜನರನ್ನು ದಾರಿ ತಪ್ಪಿಸಿ, ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.