ಉಡುಪಿ: ಮಂಗಳೂರು ವಿವಿ ಅಂತರ್ ಕಾಲೇಜು ಬ್ಯಾಡ್ಮಿಂಟನ್ ಗೆ ಚಾಲನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಅಜ್ಜರಕಾಡು ಡಾ. ಜಿ. ಶಂಕರ್‌ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬ್ಯಾಂಕ್‌ ಆಫ್‌ ಬರೋಡಾ, ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ಅಜ್ಜರಕಾಡು ಒಳಂಗಾಣ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಮಂಗಳೂರು ವಿವಿ ಅಂತರ ಕಾಲೇಜು ಮಟ್ಟದ ಪುರುಷ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಬುಧವಾರ ಉದ್ಘಾಟನೆಗೊಂಡಿತು.
ಬ್ಯಾಂಕ್‌ ಆಫ್‌ ಬರೋಡಾದ ಉಡುಪಿ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಚಾಲನೆ ನೀಡಿ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಭರವಸೆ, ಧೈರ್ಯ, ನಂಬಿಕೆ ಬಹಳ ಮುಖ್ಯವಾಗಿದ್ದು, ಇದನ್ನು ಯುವಜನತೆ ತಮ್ಮ ಬದುಕಿನಲ್ಲಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಮುಲ್ಕಿ ವಿಜಯ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಹಾಸ್‌ ಹೆಗ್ಡೆ, ಕ್ರೀಡೆಯಲ್ಲಿ ಪ್ರತಿಯೊಬ್ಬರು ಮನೋಸ್ಥೈರ್ಯವನ್ನು ವೃದ್ಧಿಸಿಕೊಳ್ಳಬೇಕು, ಛಲ, ಉದ್ದೇಶ ಹಾಗೂ ನಿರ್ದಿಷ್ಟ ಗುರಿಯನ್ನು ಹೊಂದಬೇಕು. ಇದರಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೀನು ಮಾರಾಟ -ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಉಡುಪಿ ಜಿಲ್ಲಾ ಸಹಕಾರ ಉಪನಿಬಂಧಕ ಪ್ರವೀಣ್‌ ಬಿ. ನಾಯಕ್‌, ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸಿ.ಕೆ. ಕಿಶೋರ್‌ ಕುಮಾರ್‌, ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಜೇಮ್ಸ್‌ ಒಲಿವೇರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪಂದ್ಯಕೂಟದ ಸಂಚಾಲಕ ಡಾ. ರೋಶನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕ ಡಾ. ಕೆ. ರಾಜೇಂದ್ರ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು.
60 ತಂಡಗಳು ಭಾಗಿ:
ಮಂಗಳೂರು ವಿವಿಯ ವಿವಿಧ ಕಾಲೇಜುಗಳಿಂದ ಪುರುಷರ ವಿಭಾಗದಲ್ಲಿ 32 ಹಾಗೂ ಮಹಿಳೆಯರ ವಿಭಾಗದಲ್ಲಿ 28 ತಂಡಗಳು ಸೇರಿದಂತೆ ಒಟ್ಟು 60 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ. 400 ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದೆ.