ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.
ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕುಟುಂಬದವರಿದ್ದು, 2600 ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರುಗಳು ಈ ಹಿಂದೆ ಇತರೆ ಪ್ರದೇಶಗಳಿಂದ ಜಿಲ್ಲೆಗೆ ಬಂದವರಾಗಿದ್ದು ಜೋಗಿ, ಗೊಲ್ಲ, ದೊಂಬಿದಾಸ ಹಾಗೂ ದರ್ವೇಶ್ ಜಾತಿಗೆ ಸೇರಿದವರಾಗಿದ್ದಾರೆ. ಇವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳನ್ನು ಮಾಡಬೇಕಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಈ ಸಮುದಾಯದವರು ಶಿಕ್ಷಣವಂತರಾಗುತ್ತಿದ್ದಾರೆ. ಒಂದೆಡೆ ನೆಲೆಸಿ, ಕೃಷಿ ಚಟುವಟಿಕೆ, ಸ್ವಯಂ ಉದ್ಯೋಗ ಮತ್ತಿತರ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಸರಕಾರ ಇವರುಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಸಹಾಯ ಸೇರಿದಂತೆ ಮತ್ತಿತರ ಸೌಲಭ್ಯಗಳು ಪಡೆಯಲು ಹೆಚ್ಚು ಅರ್ಜಿಗಳು ಬರುತ್ತಿವೆ. ಪ್ರಸ್ತುತ ಇರುವ ಗುರಿಗಿಂತ ಹೆಚ್ಚು ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದರು.
ಈ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಚರಂಡಿ ಸೇರಿದಂತೆ ಮತ್ತಿತರ ಸೌಲಭ್ಯ ಕಲ್ಪಿಸಲು ಸರಕಾರಕ್ಕೆ 11 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಸರಕಾರದ ವಿವಿಧ ಯೋಜನೆಯಡಿ ಕಲ್ಪಿಸಬೇಕು. ನಿವೇಶನ ರಹಿತರುಗಳಿಗೆ ನಿವೇಶನ ಒದಗಿಸಲು ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಸಲ್ಲಿಸಿ, ಇರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಮಾಹಿತಿ ನೀಡಬೇಕು ಎಂದರು.
ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಸೇರಿದಂತೆ ಮತ್ತಿತರ ಯೋಜನೆಗಳು ರೂಪಿಸಲಾಗಿದ್ದು, ಇದು ಪೂರ್ಣಪ್ರಮಾಣದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಕರಾವಳಿ ಭಾಗದಲ್ಲಿರುವ ಈ ಸಮುದಾಯದವರು ಶೈಕ್ಷಣಿಕವಾಗಿ ಮುಂದುವರೆದಿದ್ದಾರೆ. ಸಮುದಾಯದ ಅಸಂಘಟಿತ ಕಾರ್ಮಿಕರುಗಳಿಗೆ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಗುರುತಿನ ಚೀಟಿಯನ್ನು ನೀಡುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಸಮಿತಿಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.












