ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಜೂನ್ 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ ಹಾಗೂ ಮತ್ತಿತರು ಭಾಗವಹಿಸಲಿದ್ದಾರೆ.
ಸದರಿ ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಆಯುಷ್ ವೈದ್ಯಕೀಯ ಚಿಕಿತ್ಸಾ ಪದ್ಧತಿಯ ಭಾಗವಾದ ಯೋಗಾಭ್ಯಾಸ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












