ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆಯಿತು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜ್ಯೋತಿ ಕೃಷ್ಣ ಹೆಬ್ಬಾರ್ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷೆ ಗೀತಾ ವಾಗ್ಳೆ ಅಧಿಕಾರ ಹಸ್ತಾಂತರಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಮಹಿಳಾ ಕಾಂಗ್ರೆಸ್ ಅನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟನೆ ಮಾಡಿದಾಗ ಮಾತ್ರ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಜೊತೆಗೂಡಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡಬೇಕು. ಪ್ರತಿ ಬ್ಲಾಕ್ ಮಟ್ಟದಲ್ಲಿ ಸಮರ್ಥವಾದ ಅಧ್ಯಕ್ಷರನ್ನು ನೇಮಿಸಿ, ಸಮಿತಿಯನ್ನು ರಚಿಸಬೇಕು. ಬ್ಲಾಕ್ ಅಧ್ಯಕ್ಷರು ಹಾಗೂ ವಿಧಾನಸಭೆ ಚುನಾವಣೆ ಮಾಡಿರುವ ಅಭ್ಯರ್ಥಿಗಳ ಜೊತೆ ಚರ್ಚಿಸಿ ಸಾಮಾಜಿಕ ನ್ಯಾಯದೊಂದಿಗೆ ಉತ್ತಮವಾದ ಸಮಿತಿಯನ್ನು ರಚನೆ ಮಾಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ನಾಯಕರುಗಳಾದ ಪ್ರಸಾದ್ ರಾಜ್ ಕಾಂಚನ್, ಮುನಿಯಾಲು ಉದಯ ಶೆಟ್ಟಿ, ರಮೇಶ್ ಕಾಂಚನ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಹಿಳಾ ಕಾಂಗ್ರೆಸ್ ನಾಯಕಿಯರಾದ ಗೀತಾ ವಾಗ್ಳೆ, ವೆರೋನಿಕಾ ಕರ್ನೇಲಿಯೊ, ಚಂದ್ರಿಕಾ ಶೆಟ್ಟಿ, ಭಾನು ಭಾಸ್ಕರ್, ಮೀನಾಕ್ಷಿ ಮಾಧವ ಬನ್ನಂಜೆ ಉಪಸ್ಥಿತರಿದ್ದರು.














