ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಶೀಘ್ರದಲ್ಲೇ ಬಿಡುಗಡೆ

ಯೆಮೆನ್‌: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಯೆಮೆನ್‌ನಲ್ಲಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ. ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಮಂಗಳವಾರ ರಾತ್ರಿ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. ಇದೇ ವೇಳೆ ನಿಮಿಷಾ ಪ್ರಿಯಾ ಅವರನ್ನು ಉಳಿಸಿಕೊಳ್ಳಲು ಭಾರತ ಸರ್ಕಾರ ಮತ್ತು ಮೋದಿ ನಡೆಸಿದ ಪ್ರಯತ್ನಗಳನ್ನು ಶ್ಲಾಘಿಸಿದರು.