ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ತಾಲೂಕು ಸಂಚಾರಿ ಪೀಠವು ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕುರಿತು ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ಎರಡು ಬಾರಿ ನೋಟಿಸ್ ನೀಡಿದರೂ ಉತ್ತರಿಸಿದ ಕಾರಣ ಗುರುವಾರ ಮಹೇಶ್ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತಂದರು. ಬಳಿಕ ಸುಮಾರು ಎರಡು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಲಾಯಿತು. ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಬಳಿಕ ಪೊಲೀಸರು ತಿಮರೋಡಿಯನ್ನು ಹಿರಿಯಡಕ ಜೈಲಿಗೆ ಕರೆದೊಯ್ಯದರು.












